Site icon ಒಡನಾಡಿ

1-10 ತರಗತಿಯವರೆಗೂ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ : ಸಚಿವ ಸುರೇಶಕುಮಾರ

ಬೆಂಗಳೂರು :  ಕನ್ನಡ ಕಲಿಕಾ ಅಧಿನಿಯಮ 2015ರ ಕಾಯ್ದೆ ಪ್ರಕಾರ ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ 1-10ನೇ ತರಗತಿ ಮಕ್ಕಳಿಗೆ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದೆ, ಈ ವಿಷಯದಲ್ಲಿ ಯಾವುದೇ ರಾಜಿಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ತಿಳಿಸಿದ್ದಾರೆ.

ಹೊರ ರಾಜ್ಯಗಳ ಪೋಷಕರ ಒಂದು ವರ್ಗ ರಾಜ್ಯದ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ, ಕನ್ನಡಕ್ಕೆ ಕುತ್ತು ತರುವ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕನ್ನಡ ಕಲಿಕಾ ಅಧಿನಿಯಮ 2015ರ ಕಟ್ಟುನಿಟ್ಟಿನ ಜಾರಿಗೆ ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

ಪ್ರಾಧಿಕಾರದ ಅಧ್ಯಕ್ಷರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶಕುಮಾರ್, ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಈ ನೆಲದ ಕಾನೂನಿಗೆ ಬದ್ಧವಾಗಿರಬೇಕು. ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಇದಕ್ಕಾಗಿ ರೂಪಿಸಲಾಗಿರುವ ಕನ್ನಡ ಕಲಿಕಾ ಅಧಿನಿಯಮ 2015ರ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನ ವಿಚಾರಕ್ಕೆ ತಾವು ಸದಾ ಬದ್ಧ. ಸರ್ಕಾರ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಿದೆ ಎಂದು ಹೇಳಿದ್ದಾರೆ.

ಆನ್ಲೈನ್ ಅಭಿಯಾನ:
ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿರುವುದು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ಕ್ಕೆ ವಿರುದ್ಧವಾಗಿದೆ. ಅಲ್ಲದೇ ಈ ನೆಲದ ಸಂಸ್ಕೃತಿಯನ್ನು ವಿರೋಧಿಸುವಂತಹುದ್ದಾಗಿದೆ. ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಇಂತಹ ಒತ್ತಾಯಗಳಿಗೆ ಮಣಿಯದೆ ಕನ್ನಡ ಕಲಿಕೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಕೂಡಲೇ ಸುತ್ತೋಲೆ ಹೊರಡಿಸುವಂತೆಯೂ ಸಚಿವರು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಇದೇ ಸಂದರ್ಭದಲ್ಲಿ ನಿರ್ದೇಶಿಸಿದ್ದಾರೆ.

Exit mobile version