ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿಕೊಂಡಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಹಗರಣಗಳ ವಿರುದ್ಧ ಬಿಜೆಪಿ ಸದನದ ಹೊರಗೆ ಮತ್ತು ಒಳಗಡೆ ಹೋರಾಟ ಮಾಡುತ್ತಿದೆ. ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಿಟ್ಟ ಹಣವನ್ನು ಲೂಟಿ ಹೊಡೆದು ಲೋಕಸಭಾ ಚುನಾವಣೆಯಲ್ಲಿ ಬಳಸಿಕೊಂಡ ಮಾಹಿತಿ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೇವೆ. 14 ತಿಂಗಳ ಅವಧಿಯಲ್ಲಿ ಈ ಸರಕಾರ ಮೊದಲ ಬಾರಿಗೆ ಗಂಡಾಂತರಕ್ಕೆ ಸಿಲುಕಿ ಹಾಕಿಕೊಂಡಿದೆ ಎಂದರು.

ಕಳೆದ ಬಾರಿ ಸಿದ್ದರಾಮಯ್ಯನವರು 5 ವರ್ಷಗಳನ್ನು ಯಾವುದೇ ಸಮಸ್ಯೆ ಇಲ್ಲದೆ ಪೂರ್ಣಗೊಳಿಸಿದ್ದರು. ಈ ಬಾರಿ ಬ್ರಹ್ಮಾಂಡ ಭ್ರಷ್ಟಾಚಾರಗಳು ನಡೆದಿವೆ. ಒಂದು ಕಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮತ್ತೊಂದೆಡೆ ಮೈಸೂರಿನ ಮೂಡ ನಿವೇಶನ ಹಂಚಿಕೆ ಹಗರಣ ಸರಕಾರವನ್ನು ಕಾಡುತ್ತಿದೆ. ಮೂಡ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿಗಳ ಕುಟುಂಬವೇ ಭಾಗಿಯಾಗಿದೆ. ಸಿದ್ದರಾಮಯ್ಯನವರ ಸರಕಾರ ಆಡಳಿತಕ್ಕೆ ಬಂದ ಬಳಿಕ ಸಾವಿರಾರು ಕೋಟಿ ಬೆಲೆಬಾಳುವ ನಿವೇಶನಗಳನ್ನು ಖುಷಿ ಬಂದಂತೆ ಹಂಚಿದ್ದಾರೆ ಎಂದು ಟೀಕಿಸಿದರು.

ಮೂಡ ಹಗರಣದಿಂದ ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸಾವಿರಾರು ಕೋಟಿ ನಷ್ಟವಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಲ್ಲದೆ, ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹ ಮಾಡುತ್ತಿದ್ದೇವೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

About ಬಿ.ಎನ್‌. ವಾಸರೆ 583 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*